*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 11 ಸಾರ್ವಜನಿಕ ಸ್ಥಳಗಳಲ್ಲಿ, ಹೋಟೆಲ್‌ಗಳಲ್ಲಿ, ಬೇಕರಿಗಳಲ್ಲಿ, ಗ್ಯಾರೇಜ್‌ಗಳಲ್ಲಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಬಾಲಕಾರ್ಮಿಕರನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬರಾವ್.ಎಸ್ ಅವರು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಪದ್ಧತಿಗಳ ಕುರಿತ ಉಚಿತ ಕಾನೂನು ಅರಿವು- ನೆರವು ಕಾರ್ಯಕ್ರಮ”ದಲ್ಲಿ ಅವರು ಮಾತನಾಡಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಪ್ರಕಾರ 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಸಂಬಂಧಪಟ್ಟ ಮಾಲೀಕರಿಗೆ ಕನಿಷ್ಠ ಆರು ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ಎರಡು ವರ್ಷದವರೆಗೂ ಜೈಲು ಶಿಕ್ಷೆ, ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರ ಗಳವರೆಗೂ ದಂಡ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆಯೆಂದು ತಿಳಿಸಿದರು.
ದೇವನಹಳ್ಳಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ವಕೀಲರಾದ ಮುನಿಯಪ್ಪ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿಯನ್ನು ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಅನಿತಾಲಕ್ಷ್ಮಿ ಮಾತನಾಡಿ ಕರ್ನಾಟಕದಲ್ಲಿ ಆಪ್ತಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಉಚಿತ ಟೆಲಿ- ಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲು ಟೋಲ್ ಫ್ರೀ ನಂಬರ್ 14499 ಸ್ಥಾಪಿಸಲಾಗಿದ್ದು, ಆಪ್ತ ಸಮಾಲೋಚನೆ ಅವಶ್ಯಕತೆ ಇರುವ ಕರ್ನಾಟಕದ ಎಲ್ಲ ಮಕ್ಕಳು ಹಾಗೂ ಮಕ್ಕಳ ಪೋಷಕರು 14499 ಸಂಖ್ಯೆಗೆ ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತಸಮಾಲೋಚನೆ ಸೌಲಭ್ಯ ಪಡೆಯಬಹುದೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶ್ರೀಧರ್, ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ವೆಂಕಟೇಶ್, ಭವ್ಯ, ಶೈಲಜಾ, ಮಹಿಳಾ ಶಕ್ತಿಕೇಂದ್ರದ ಜಿಲ್ಲಾ ಸಂಯೋಜಕಿ ಸೌಮ್ಯ, ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ನಂದಿನಿ, ರಮೇಶ್, ಸುವರ್ಣಗೌರಿ, ಮಕ್ಕಳ ಸಹಾಯವಾಣಿ ಕೇಂದ್ರದ ಮುರಳಿ ಮತ್ತು ಮಂಜುನಾಥ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಪ್ರೋಗ್ರಾಮ್ ಮ್ಯಾನೇಜರ್ ಕರಿಯಪ್ಪ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಮೂರ್ತಿ ಮತ್ತು ಹರ್ಷಿತ್ ಉಪಸ್ಥಿತರಿದ್ದರು.
ಗುರುಮೂರ್ತಿ ಬೂದಿಗೆರೆ
8861100990