ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ: ಸಚಿವ ಜೆ.ಸಿ.ಮಾಧುಸ್ವಾಮಿ
ಬೆಂಗಳೂರು, ಸೆ.16: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್, ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ಜತೆಗೆ ನಿಗಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 2018-19ರಲ್ಲಿ 295.80 ಲಕ್ಷ ರೂ., 2019-20ರಲ್ಲಿ 149.80 ಲಕ್ಷ., 2020-21ರಲ್ಲಿ 56.54 ಲಕ್ಷ ರೂ.ಬಿಡುಗಡೆ ಮಾಡಲಾಗಿದೆ. ನಿಗಮವು ಅರಿವು ಸಾಲ ಯೋಜನೆ ಸೇರಿ 12 ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಬಿ.ಎಂ.ಫಾರೂಖ್ ಅವರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಬೇಕು. ನಿಗಮಕ್ಕೆ 300 ಕೋಟಿ ರೂ.ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.