ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ: ಜಿಲ್ಲಾಧಿಕಾರಿ ಕೆ. ಶ್ರೀನಿವಾಸ

 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 16ಪ್ರತಿಯೊಂದು ಜೀವವು ಅತ್ಯಮೂಲ್ಯವಾಗಿದ್ದು, ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತರ ಕುಟುಂಬಗಳು ಅನಾಥರಾಗುವುದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದಿದ್ದರೆ, ಸುಪ್ರೀಂಕೋರ್ಟ್ ನಿಯಮಾವಳಿ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ”ಯಲ್ಲಿ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಅಪಘಾತ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಅಲ್ಲದೆ ಅಪಘಾತ ಸಂಭವಿಸಿದ ತಕ್ಷಣವೇ ಅಂಬ್ಯುಲೆನ್ಸ್ ಸೇರಿದಂತೆ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ವ್ಯಾಪ್ತಿಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕ್ರೇನ್, ಆಂಬ್ಯುಲೆನ್ಸ್, ಪೆಟ್ರೋಲಿಂಗ್ ವಾಹನಗಳ ಪ್ರಸ್ತುತ ಸ್ಥಿತಿಗತಿ ಬಗ್ಗೆ ‌ಸಮಗ್ರ ಮಾಹಿತಿಯನ್ನು ನಿಗದಿತ ದಿನಾಂಕದೊಳಗೆ ನೀಡಬೇಕು ಹಾಗೂ ಪ್ರಯಾಣಕ್ಕೆ ಅಡಚಣೆಯಾಗುವ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.

2019ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 680 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಸಾವಿನ ಪ್ರಮಾಣ ಕಡಿತಗೊಳಿಸಲು ಎಲ್ಲಾ ಇಲಾಖೆಗಳು ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಜೊತೆಗೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳು ಮತ್ತು ನಿಯಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರವಿ.ಡಿ.ಚನ್ನಣ್ಣನವರ್ ಅವರು ಮಾತನಾಡಿ, ಜಿಲ್ಲೆಯಲ್ಲಿ 60 ಅಪಘಾತ ವಲಯ(Block Spots)ಗಳನ್ನು ಗುರುತಿಸಲಾಗಿದ್ದು, ಅವುಗಳ ಪೈಕಿ 15 ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರಲ್ಲದೆ, ಜಿಲ್ಲೆಯಲ್ಲಿ ಪ್ರತಿ ದಿನ 2-3 ಅಪಘಾತ ಸಂಭವಿಸುತ್ತಿದ್ದು, ಮುಂದಿನ ವರ್ಷದೊಳಗೆ ಅಪಘಾತ ಪ್ರಮಾಣದಲ್ಲಿ ಶೇ. 10 ರಷ್ಟು ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕದಿಂದ ರಾಜಧಾನಿಗೆ ಬರಲು ನೆಲಮಂಗಲ ಹೆಬ್ಬಾಗಿಲು ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್ ಸಿಬ್ಬಂದಿಗಳು ಯಾರೊಂದಿಗೂ ಅನುಚಿತವಾಗಿ ವರ್ತಿಸಬಾರದು ಎಂದರಲ್ಲದೆ, ಟೋಲ್‌ಗಳಲ್ಲಿ ಅಗತ್ಯವಿರುವ ಕಡೆ ಪೊಲೀಸ್ ಇಲಾಖೆಯಿಂದ ಹೋಮ್‌ಗಾರ್ಡ್‌ಗಳನ್ನು ನಿಯೋಜಿಸಿ ಭದ್ರತೆ ಒದಗಿಸಲಾಗುವುದು ಎಂದರು.

ಪ್ರಮುಖ ಸ್ಥಳಗಳಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು, ಹೆದ್ದಾರಿಯಲ್ಲಿ ಜೀಬ್ರಾ ಪಟ್ಟಿ ಮಾರ್ಕಿಂಗ್, ಅಂಡರ್ ಪಾಸ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗೂ ಶೀಘ್ರವೇ ಪಾದಚಾರಿಗಳು ಬಳಸಲು ಅನುವಾಗುವಂತೆ ಒಂದು ತಿಂಗಳ ಅವಧಿಯಲ್ಲಿ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ ವಾಹನಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಬಾರದು. ಇದರಿಂದ ಮುಂದಿನ ದಿನಗಳಲ್ಲಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಹೆದ್ದಾರಿ ಪಕ್ಕದ ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಬಕಾರಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಅಪಘಾತ ಪ್ರಕರಣಗಳಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳು ಅಪಘಾತ ಸಂಭವಿಸಿದ ವ್ಯಕ್ತಿಗಳನ್ನು ಪರೀಕ್ಷಿಸಿ ವರದಿಯನ್ನು ಶೀಘ್ರವಾಗಿ ನೀಡಬೇಕು ಎಂದರು.

ಪೋಲಿಸ್ ಇಲಾಖೆ ವತಿಯಿಂದ ಟ್ರಾಕ್ಟರ್, ಎತ್ತಿನಗಾಡಿ ಮತ್ತು ಬಿಡಾಡಿ ದನಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಸಲಾಗುವುದು ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸದಂತೆ ತಡೆಯಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಹೆದ್ದಾರಿಯಲ್ಲಿ ಅಗತ್ಯವಿರುವ ಕಡೆ ಸ್ಕೈವಾಕ್ ಗಳನ್ನು ನಿರ್ಮಿಸಬೇಕು ಹಾಗೂ ನಿಗದಿತ ನಿಲುಗಡೆ ಸ್ಥಳಗಳಲ್ಲಿ ಮಾತ್ರ ಸರ್ಕಾರಿ ಮತ್ತು ಬಸ್ಸುಗಳು ನಿಲ್ಲಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೋಲೀಸ್ ಉಪ ಅಧೀಕ್ಷಕ ಲಕ್ಷೀಗಣೇಶ್, ಡಿವೈಎಸ್ಪಿ ಟಿ.ರಂಗಪ್ಪ, ಆರ್.ಟಿ.ಓ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!