ಫೆ.20 ರಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಲಿರುವ ಕಂದಾಯ ಸಚಿವ ಆರ್.ಅಶೋಕ

 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 18 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ವಿನೂತನ ಕಾರ್ಯಕ್ರಮವನ್ನು 2021ರ‌ ಫೆಬ್ರವರಿ 20 ರ ಶನಿವಾರದಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಉದ್ಘಾಟಿಸಿ, ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿಂದು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಂದಾಯ ಇಲಾಖೆ ವತಿಯಿಂದ “ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ” ಎಂಬ ಕಾರ್ಯಕ್ರಮ ನಡೆಯಲಿದ್ದು ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಕಂದಾಯ ಸಚಿವರು ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಚಾಲನೆ ನೀಡಲಿದ್ದಾರೆ, ಬೆಂಗಳೂರು ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೇರಿದಂತೆ ಕಂದಾಯ ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಹಳ್ಳಿಯಾದ ಸಾಸಲು ಹೋಬಳಿಯ ಹೊಸಹಳ್ಳಿಯನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವುದು ಎಂದರು.

ಫೆ.20ರ ಶನಿವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಪಿಂಚಣಿ, ಆಧಾರ್, ಪಹಣಿ, ಸ್ಮಶಾನಕ್ಕೆ ಭೂಮಿ ಮಂಜೂರು, ಗಿಡಗಳನ್ನು ನೆಡುವುದು ಸೇರಿದಂತೆ ಪಡಿತರ ಚೀಟಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಆರೋಗ್ಯ ಶಿಬಿರ, ವೇದಿಕೆ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಂದು ಸಚಿವರು ದಲಿತರ ಮನೆಗಳಿಗೆ ತೆರಳಿ ಉಪಾಹಾರ ಸೇವಿಸಲಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕಂದಾಯ ಅಧಿಕಾರಿಗಳು ಹಲವು ವಿಷಯಗಳ ಫಲಾನುಭವಿಗಳನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ ಪಹಣಿ ಕಾಲಂ 3 ಮತ್ತು 9ಕ್ಕೆ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಾಗುವುದು‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದ್ದು, ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಿಂಚಣಿಯನ್ನು ಮಂಜೂರು ಮಾಡಲಾಗುವುದು ಎಂದರು.

ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಲಾಗುವುದು, ಆಧಾರ್ ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಹದ್ದುಬಸ್ತು ಪೋಡಿ ಬಗ್ಗೆ ಮಾಹಿತಿ ನೀಡಲಾಗುವುದು. ಸರ್ಕಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಸುಸ್ಥಿತಿ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲಾ ಅರ್ಹ ಬಡ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮವಹಿಸಲಾಗುವುದು. ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣದ ಬಗ್ಗೆ ಗ್ರಾಮ ಭೇಟಿಯ ಸಂರ್ಧಭದಲ್ಲಿ ಪರಿಶೀಲಿಸಲಾಗುವುದು ಹಾಗೂ ಇತರೆ ಇಲಾಖೆಗಳಿಂದ ನೀಡಬಹುದಾದ ಸೌಲಭ್ಯದ ಬಗ್ಗೆ ಗ್ರಾಮದಲ್ಲಿ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯಿಂದ ನೀಡಲಾಗುವ ಸವಲತ್ತುಗಳಾದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿಯಲ್ಲಿ 150 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ, 250 ಫಲಾನುಭವಿಗಳ ಆಧಾರ್ ನೋಂದಣಿ, 50 ಫಲಾನುಭವಿಗಳಿಗೆ ಮತದಾರರ ಗುರುತಿನ ಚೀಟಿ(EPIC), 200 ಪಹಣಿ ಕಾಲಂ 3&9ರ ತಿದ್ದುಪಡಿ, 25 ಪೌತಿ ಖಾತೆ ಸೇರಿದಂತೆ 625 ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲಿದ್ದೇವೆ ಎಂದು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ಕೋರಮಂಗಲ ಗ್ರಾಮ, ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿ ತವಟಹಳ್ಳಿ ಗ್ರಾಮ ಹಾಗೂ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹೊನ್ನಾರಾಯನಹಳ್ಳಿ ಗ್ರಾಮವನ್ನು ಫೆ.20ರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದ್ದು, ಆಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಿ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಗ್ರಾಮಸ್ಥರಿಗೆ ಸವಲತ್ತುಗಳನ್ನು ನೀಡಲು ಹಾಗೂ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸದ ಬಗ್ಗೆ ಹಾಗೂ ಪಿಂಚಣಿ ಆಂದೋಲನದ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಗ್ರಾಮ ವಾಸ್ತವ್ಯಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಉಪಸ್ಥಿತರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!