ಅಫ್ಘಾನ್ ತಾಲಿಬಾನ್ ವಶ : ಜಮ್ಮು-ಕಾಶ್ಮೀರ ಭದ್ರತೆಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಲಿರುವ ಅಮಿತ್ ಶಾ
ನವದೆಹಲಿ: ಅಫ್ಘಾನಿಸ್ಥಾನ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದಂತೆ ಈ ವಾರ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ವಾರ ಈ ಮಹತ್ವದ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅಫ್ಘಾನಿಸ್ಥಾನ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಮೇಲೆ ಪರಿಣಾಮ ಬೀರಬಹುದು ಎಂಬ ಕಾಳಜಿಯ ಮೇರೆಗೆ ಸಭೆ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಅಫಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಇರುವ ಬಗ್ಗೆ ಯಾವುದೇ ಆತಂಕವನ್ನು ಪಡುವ ಅವಶ್ಯಕತೆಯಿಲ್ಲ ಎಂದು ಸೇನೆ ಈಗಾಗಲೇ ಸ್ಪಷ್ಟಪಡಿಸಿದೆ.
ಪ್ರಧಾನಿ ಸ್ಥಾನದಲ್ಲಿನ ಭಯೋತ್ಪಾದನೆ ಚಟುವಟಿಕೆಗಳು ಭಾರತದೊಳಗೆ ಕಾಲಿಡುವ ಸಂಭವದ ಬಗ್ಗೆ ಹೆಚ್ಚಿನ ಗಮನ ನೀಡಲಾಗಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.