ಬೆಂಗಳೂರು: 100 ಕೋಟಿ ರೂ. ಮೌಲ್ಯದ ಆಸ್ತಿ ಒತ್ತುವರಿ ತೆರವುಗೊಳಿಸಿದ ಬಿಡಿಎ

ಬೆಂಗಳೂರು: 100 ಕೋಟಿ ರೂ. ಮೌಲ್ಯದ ಆಸ್ತಿ ಒತ್ತುವರಿ ತೆರವುಗೊಳಿಸಿದ ಬಿಡಿಎ

ಬೆಂಗಳೂರು: ಭೂಕಬಳಿಕೆದಾರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರ ಜೆಪಿ ನಗರದ ಆಲಹಳ್ಳಿಯಲ್ಲಿ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ಮರುವಶಕ್ಕೆ ಪಡೆದುಕೊಂಡಿದೆ.

 

ಜೆಪಿ ನಗರ ಬಡಾವಣೆಯ ಆಲಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

 

ಜೆಪಿ ನಗರ ಬಡಾವಣೆಯ 9 ನೇ ಹಂತದ ನಿರ್ಮಾಣಕ್ಕೆಂದು 1988 ರಲ್ಲಿ ಈ ಜಾಗವನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಪ್ರಾಥಮಿಕ ಅಧಿಸೂಚನೆಯನ್ನು ಬಿಡಿಎ ಹೊರಡಿಸಿತ್ತು. ಇದಾದ ಬಳಿಕ 1997 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿ ಜಾಗವನ್ನು ಸ್ವಾಧೀನಕ್ಕೆ ತೆಗೆದುಕೊಂಡಿತ್ತು.

 

ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಕೆಲವರು ತಾತ್ಕಾಲಿಕವಾಗಿ 40 ಶೆಡ್ ಗಳನ್ನು ನಿರ್ಮಾಣ ಮಾಡಿ ಜಾಗ ತಮ್ಮದೆಂದು ಪ್ರತಿಪಾದಿಸಿದ್ದರು. ಆದರೆ, ಇದರ ವಿರುದ್ಧ ಬಿಡಿಎ ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ನ್ಯಾಯಾಲಯ ಬಿಡಿಎ ಪರವಾಗಿ ತೀರ್ಪು ನೀಡಿ, ಸದರಿ ಜಾಗವನ್ನು ವಶಪಡಿಸಿಕೊಳ್ಳುವಂತೆ ಇತ್ತೀಚೆಗೆ ಆದೇಶ ನೀಡಿತ್ತು.

 

ನ್ಯಾಯಾಲಯದ ಆದೇಶದ ಮೇರೆಗೆ ಕಾರ್ಯಪಾಲಕ ಅಭಿಯಂತರ ಚುಂಚೇಗೌಡ, ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಡಿವೈಎಸ್ ಪಿ ರವಿಕುಮಾರ್ ಸೇರಿದಂತೆ 75 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಶೆಡ್ ಗಳನ್ನು 5 ಕ್ಕೂ ಅಧಿಕ ಜೆಸಿಬಿಗಳನ್ನು ಬಳಸಿ ತೆರವುಗೊಳಿಸಲಾಯಿತು.

 

ಅತಿಕ್ರಮಣ ತೆರವು ನಿರಂತರ ಪ್ರಕ್ರಿಯೆ

 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.

 

ಹಲವಾರು ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಗಳನ್ನು ಒತ್ತುವರಿ ಅಥವಾ ಭೂಕಬಳಿಕೆದಾರರು ಕಬಳಿಕೆ ಮಾಡಿದ್ದಾರೆ. ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

 

ನಿವೇಶನಗಳ ಹರಾಜು

 

ಬಿಡಿಎಗೆ ಸೇರಿದ ಸ್ವತ್ತುಗಳನ್ನು ವಶಪಡಿಸಿಕೊಂಡು ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಸಾರ್ವಜನಿಕರಿಗೆ ಹರಾಜಿನ ಮೂಲಕ ಹಂಚಿಕೆ ಮಾಡಬೇಕೆಂದು ಇತ್ತೀಚೆಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ನಿರ್ದೇಶನದಂತೆ ಬಿಡಿಎ ಆಸ್ತಿಗಳನ್ನು ವಶಪಡಿಸಿಕೊಂಡು ಹಂತಹಂತವಾಗಿ ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version