ಅಡಿಕೆ ಹಳದಿ ರೋಗ ನಿವಾರಣೆಗೆ ವಿಶೇಷ ಪ್ರಯತ್ನ: ಕರಂದ್ಲಾಜೆ
ಪುತ್ತೂರು: ‘ಅಡಿಕೆ ಬೆಳೆಗೆ ಬಾಧಿಸುತ್ತಿರುವ ಹಳದಿ ರೋಗದ ನಿವಾರಣೆಗೆ ವಿಶೇಷ ಪ್ರಯತ್ನಗಳನ್ನು ಮಾಡಲಾಗುತ್ತದೆ. ಅಲ್ಲದೆ, ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪುತ್ತೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೆಂಗಿನಕಾಯಿ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ತೆಂಗಿನ ಉತ್ಪನ್ನಗಳ ರಫ್ತಿಗೆ ಇರುವ ನಿಷೇಧವನ್ನು ತೆರವುಗೊಳಿಸಿ, ತೆಂಗು ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ’ ಎಂದರು.
‘ಕೃಷಿ ಆಧಾರಿತ ದೇಶವಾದ ಭಾರತದಲ್ಲಿ ಆಹಾರ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ಈ ದಿಸೆಯಲ್ಲಿ ಹಡೀಲು ಭೂಮಿಯಲ್ಲಿ ಕೃಷಿ ನಡೆಸಲು ಉತ್ತೇಜಿಸುವ ಕಾರ್ಯ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗಿದೆ’ ಎಂದು ಅವರು ತಿಳಿಸಿದರು.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ ಇದ್ದರು.