ವರ್ಗಾವಣೆಗೆ ಕೌನ್ಸಿಲಿಂಗ್ ಕಡ್ಡಾಯ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ವರ್ಗಾವಣೆಗೆ ಕೌನ್ಸಿಲಿಂಗ್ ಕಡ್ಡಾಯ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಆ. 18: `ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

 

ಬುಧವಾರ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘಿಸಿ ವರ್ಗಾವಣೆ ಪ್ರಸ್ತಾವನೆ, ಶಿಫಾರಸು ತಂದರೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ನಿರ್ಧಾರದ ಮೂಲಕ ಅನಿಯಮಿತ ವರ್ಗಾವಣೆ, ಭ್ರಷ್ಟಾಚಾರಕ್ಕೆ ತಡೆ ಬೀಳಲಿದ್ದು, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು ಹಾಗೂ ಆರೋಗ್ಯ ಸೇವೆ ಒದಗಿಸುವಲ್ಲಿ ದಕ್ಷತೆ ಬರಲಿದೆ’ ಎಂದು ಹೇಳಿದರು.

 

ಆ ಮೂಲಕ ಇಲಾಖೆಯಲ್ಲಿ ಅನಿಯಮಿತ ವರ್ಗಾವಣೆಗೆ ತಡೆ ಹಾಕಿ, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ದಕ್ಷತೆ ತರಲಾಗಿದೆ. ಇದರಿಂದಾಗಿ ಇನ್ನು ಮುಂದೆ ಸಾರ್ವಜನಿಕರಿಗೆ ಯಾವುದೇ ಅಡ್ಡಿ ಇಲ್ಲದೆ ಸಮರ್ಪಕ ಆರೋಗ್ಯ ಸೇವೆ ಲಭ್ಯವಾಗಲಿದೆ. ಆರೋಗ್ಯ ಇಲಾಖೆಯ ಆಡಳಿತದಲ್ಲಿ ದಕ್ಷತೆ ತಂದು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿದ್ದು, ಪಾರದರ್ಶಕ ಹಾಗೂ ನಿಗದಿತ ಕಾಲಮಿತಿಯಲ್ಲಿ ಸಕ್ಷಮ ಪ್ರಾಧಿಕಾರಗಳ ಮೂಲಕವೇ ವರ್ಗಾವಣೆ ಮಾಡುವ ಕಾನೂನನ್ನು ಕಡ್ಡಾಯವಾಗಿ ಜಾರಿಗೊಳಿಸಲು ಉನ್ನತಾಧಿಕಾರಿಗಳ ಸಭೆಯಲ್ಲಿ ಸೂಚಿಸಲಾಗಿದೆ. ಈ ಸಂಬಂಧ ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಶಿಫಾರಸು, ಲಾಬಿಗಳಿಗೆ ತಡೆ ಬಿದ್ದಂತೆ ಆಗಿದೆ.

 

ಸಚಿವರಿಂದ ಸೂಚನೆ: ಇಲಾಖೆಯ ವ್ಯಾಪ್ತಿಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆಯನ್ನು `ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011’ರ ಅನ್ವಯ ಕೌನ್ಸಿಲಿಂಗ್ ಮೂಲಕ ಮಾತ್ರ ಕೈಗೊಳ್ಳುವಂತೆ ಸ್ಪಷ್ಟ ಆದೇಶವಿದೆ. ಈ ಕಾಯ್ದೆಯ ಕಲಂ 5ರಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಕೌನ್ಸಿಲಿಂಗ್‍ನಿಂದ ವಿನಾಯಿತಿ ನೀಡಲಾಗಿದೆ. ಅಂತಹ ಪ್ರಸ್ತಾವಗಳನ್ನು ಸಚಿವರಿಗೆ ಕಳುಹಿಸಲಾಗುತ್ತದೆ. ಆದರೆ ಇತರೆ ವರ್ಗಾವಣೆ ಪ್ರಸ್ತಾವಗಳನ್ನು ಕಳುಹಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಕಡತ ನಿರ್ವಹಿಸುವ ವಿಷಯ ನಿರ್ವಹಕರು ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ.

 

`ಗಂಭೀರ ಹಾಗೂ ಮಾರಣಾಂತಿಕ ರೋಗದಿಂದ ಬಳಲುತ್ತಿರುವವರು, ವಯೋ ನಿವೃತ್ತಿ ಅಂಚಿನಲ್ಲಿದ್ದು, ಇನ್ನು ಎರಡು ವರ್ಷ ಮಾತ್ರ ಸೇವೆ ಬಾಕಿ, ಶೇ.40ಕ್ಕೂ ಹೆಚ್ಚು ಅಂಗವೈಕಲ್ಯ ಹೊಂದಿರುವವರು, ವಿಧವೆಯರು, ಪತಿ-ಪತ್ನಿ ಪ್ರಕರಣಕ್ಕೆ ಮಾತ್ರ ಕೌನ್ಸಿಲಿಂಗ್‍ನಿಂದ ವಿನಾಯಿತಿ ನೀಡಬೇಕು. ಇಂತಹ ಪ್ರಸ್ತಾವಗಳನ್ನು ಅಪರ ಮುಖ್ಯ ಕಾರ್ಯದರ್ಶಿಯವರ ಸ್ಪಷ್ಟ ಶಿಫಾರಸಿನೊಂದಿಗೆ ಕಡತವನ್ನು ಎರಡು ತಿಂಗಳಿಗೊಮ್ಮೆ ಮಾತ್ರ ಸಚಿವರ ಅನುಮೋದನೆಗೆ ಸಲ್ಲಿಸಬೇಕು. ಈ ಕುರಿತು ಕಾಯ್ದೆಯಲ್ಲಿ ಅವಶ್ಯ ತಿದ್ದುಪಡಿ ತರಲು ಮುಂದಿನ ಕ್ರಮ ಕೈಗೊಳ್ಳುವಂತೆ ಸಚಿವ ಸುಧಾಕರ್ ಸೂಚನೆ ನೀಡಿದ್ದಾರೆ. ವರ್ಗಾವಣೆ ಸಂಬಂಧ 2011ರಲ್ಲಿ ಕಾನೂನು ರೂಪಿಸಿ, ನಿಯಮ ರಚಿಸಲಾಗಿದೆ. 2017ರಲ್ಲಿ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗಿದೆ. ಇನ್ನು ಮುಂದೆ ಈ ಕಾನೂನು ಅನ್ವಯ ವರ್ಗಾವಣೆ ನಡೆಯಲಿದೆ ಎಂದರು.

ನಿಯಮದಲ್ಲೇನಿದೆ?: ಹಿರಿಯ ತಜ್ಞರು, ತಜ್ಞರು, ಉಪಮುಖ್ಯ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಮುಖ್ಯ ದಂತ ವೈದ್ಯಾಧಿಕಾರಿ, ಹಿರಿಯ ದಂತ ವೈದ್ಯಾಧಿಕಾರಿ, ದಂತ ವೈದ್ಯಾಧಿಕಾರಿಗಳ ವರ್ಗಾವಣೆಯನ್ನು ಇಲಾಖೆಯ ಆಯುಕ್ತರು ಮಾಡಬಹುದು. ಗ್ರೂಪ್ `ಬಿ, ಸಿ, ಡಿ’ ನೌಕರರನ್ನು ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು. ಆಯುಷ್ ಇಲಾಖೆಯಡಿಯ ಫಿಸಿಶಿಯನ್ ಗ್ರೇಡ್ `1′, ಗೇಡ್ `2’ಗೆ ಆಯುಷ್ ಇಲಾಖೆಯ ನಿರ್ದೇಶಕರು, ಆಯುಷ್ ಇಲಾಖೆಯ ಗ್ರೂಪ್ ಬಿ, ಸಿ, ಡಿ, ನೌಕರರಿಗೆ ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು. ಗ್ರೂಪ್-`ಎ’ಗೆ ಮೂರು ವರ್ಷ, ಗ್ರೂಪ್-`ಬಿ’ಗೆ ನಾಲ್ಕು ವರ್ಷ, ಗ್ರೂಪ್-`ಸಿ’ಗೆ ಐದು ವರ್ಷ, ಗ್ರೂಪ್-`ಡಿ’ಗೆ ಏಳು ವರ್ಷ ಒಂದು ಕಡೆ ಕಡ್ಡಾಯವಾಗಿ ಸೇವೆ ಸಲ್ಲಿಸಲು ನಿಯಮದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version