ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಶೀಘ್ರ ಹಣ ಬಿಡುಗಡೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್*

 

 

 

 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 15 ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತೀ ತಾಲ್ಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ, ಶೀಘ್ರ ಹಣ ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ನಡೆದ ಜಿಲ್ಲಾಮಟ್ಟದ ಕುಡಿಯುವ ನೀರಿನ ಟಾಸ್ಕ್ ಪೋಸ್೯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯ ಪ್ರವೃತ್ತರಾಗಬೇಕು ಎಂದರು. ಅಲ್ಲದೆ, ಜಿಲ್ಲಾಡಳಿತದ ವತಿಯಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಹಾಗೂ ಜಿಲ್ಲೆಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಬವಣೆ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಅವರು ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಕೊಳವೆಬಾವಿಗಳನ್ನು ಕೊರೆಯದಂತೆ ಆದೇಶ ಹೊರಡಿಸಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವವಿರುವುದರಿಂದ ಜಿಲ್ಲೆಯ ನಾಲ್ಕೂ ತಾಲ್ಲೂಕಿನ ಶಾಸಕರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಕೊಳವೆಬಾವಿ ಕೊರೆಯಲು ಅನುಮತಿ ನೀಡುವಂತೆ ಹಾಗೂ ಅಗತ್ಯ ಹಣಕಾಸು ನೆರವು ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಮೂಲಗಳು ಇಲ್ಲ. ನೀರಿನ ಸಮಸ್ಯೆ ನಿವಾರಣೆಗೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವುದು ಅಪಾಯಕಾರಿ ಎಂದು ಸರ್ಕಾರ ತಿಳಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ ನೀರು ಸರಬರಾಜು ಮಾಡುವವರಿಗೆ ಅನುದಾನ ಬಿಡುಗಡೆ ಮಾಡದೆ ಇರುವುದರಿಂದ ನಾಗರೀಕರು ತೊಂದರೆ ಅನುಭವಿಸುವಂತಾಗಿದೆ ಎಂದು ತಿಳಿಸಿದರು.

ವಿಫಲವಾದ ಕೊಳವೆ ಬಾವಿಗಳ ಮೋಟರ್ ಸೇರಿದಂತೆ ಹಲವು ಉಪಯುಕ್ತ ಉಪಕರಣಗಳನ್ನು ಹೊಸದಾಗಿ ಕೊರೆಯುವ ಕೊಳವೆ ಬಾವಿಗಳಿಗೆ ಅಳವಡಿಸುವುದರಿಂದ ಹಣ ಉಳಿತಾಯವಾಗುವುದರ ಜೊತೆಗೆ ಶೀಘ್ರ ಕಾಮಗಾರಿ ನಡೆಯುತ್ತದೆ ಎಂದು ಹೇಳಿದರು.

ಹೆಚ್ಚಿನ ಆದಾಯ ಬರುವಂತಹ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಲು ಯಾವುದೇ ಅಡ್ಡಿ ಇಲ್ಲವೆಂದರಲ್ಲದೆ, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕಾರದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಜಿಲ್ಲಾ ವ್ಯಾಪ್ತಿಯಲ್ಲಿನ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗುತ್ತಿದ್ದು, ಅಂತಹ ಗ್ರಾಮಗಳ ಹೊರಗಿನ ಸರ್ಕಾರಿ ಪ್ರದೇಶದಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೆರೆಗಳಿಗೆ ನೀರು ತುಂಬಿಸುವ ಕಾರ್ಯವಾಗಬೇಕು. ಇಲ್ಲವಾದಲ್ಲಿ ಕೆರೆಗಳು ಒಣಗುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಕೊಳವೆ ಬಾವಿಗಳು ಬತ್ತಿ ಹೋಗುವುದರಿಂದ ಅಧಿಕಾರಿಗಳು ಶೀಘ್ರವೇ ಮೋಟಾರ್‌ಗಳನ್ನು ದುರಸ್ತಿಗೊಳಿಸಿ ನೀರನ್ನು ತುಂಬಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

14 ಮತ್ತು 15 ನೇ ಹಣಕಾಸು ಆಯೋಗದ ಅನುದಾನದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಶೇ.25 ರಷ್ಟು ಹಣವನ್ನು ಕುಡಿಯುವ ನೀರು ಪೂರೈಕೆಗೆ ಬಳಸಲು ಅವಕಾಶವಿದ್ದು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಿಳಿಸಿದರು.

ಇದೇ ವೇಳೆ ಮಾತನಾಡಿದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‌ಕುಮಾರ್ ಬಚ್ಚೇಗೌಡ ಅವರು, ಹೊಸಕೋಟೆ ತಾಲ್ಲೂಕಿನ ನಗರ ಭಾಗದಲ್ಲಿರುವ ದೊಡ್ಡಕೆರೆಯಲ್ಲಿ ನೀರಿನ ಮಟ್ಟ ಪ್ರತಿ ದಿನ ಇಳಿಕೆಯಾಗುತ್ತಿದ್ದು, ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದರಲ್ಲದೆ, ಶೀಘ್ರವೇ ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಬೇಕು ಹಾಗೂ ಜಿಲ್ಲಾಡಳಿತದ ವತಿಯಿಂದ ಕೊಳವೆ ಬಾವಿ ಕೊರೆಯಲು ಅನುಮತಿ ನೀಡಬೇಕು ಎಂದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು ಹಾಗೂ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 95 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರು ಸರಬರಾಜು ಮಾಡಲು ಆರ್ಥಿಕವಾಗಿ ಸಂಕಷ್ಟ ಎದುರಾಗಿದ್ದು, ಜಾನುವಾರುಗಳಿಗೂ ನೀರು ಸಿಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದು ಕೊಳವೆಬಾವಿ ಕೊರೆಸಲು ಅನುಮತಿ ನೀಡುವ ಕೆಲಸ ತುರ್ತಾಗಿ ಆಗಬೇಕಿದೆ ಎಂದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತಾಗಿದೆ ಎಂದರು.ಅಲ್ಲದೆ, ನಗರಸಭೆಯಿಂದ ಹಣಕಾಸು ನೆರವು ಸಿಗದಿರುವುದರಿಂದ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ರೂಪ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version