ವಿದ್ಯಾರ್ಥಿಗಳ ಬಾಕಿ ಇದ್ದ ಪ್ರೋತ್ಸಾಹ ಧನ ಬಿಡುಗಡೆಗೆ ಆದೇಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಿದ್ಯಾರ್ಥಿಗಳ ಬಾಕಿ ಇದ್ದ ಪ್ರೋತ್ಸಾಹ ಧನ ಬಿಡುಗಡೆಗೆ ಆದೇಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: `ಎಸೆಸೆಲ್ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ 55 ಕೋಟಿ ಪ್ರೋತ್ಸಾಹ ಧನ ನೀಡಬೇಕಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಲು ಆದೇಶಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದಿಲ್ಲಿ ತಿಳಿಸಿದ್ದಾರೆ.

 

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, `ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

 

`ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆದಿರುವ ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ಗಳ 13 ಸಾವಿರ ವಿದ್ಯಾರ್ಥಿಗಳು ತಮಗೂ ವಿದ್ಯಾರ್ಥಿ ವೇತನ ನೀಡುವಂತೆ ಮನವಿ ಮಾಡಿದ್ದರು. ಮಾನವೀಯ ನೆಲೆಯಲ್ಲಿ ಈ ಬೇಡಿಕೆಯನ್ನು ಒಪ್ಪಿಕೊಂಡಿದ್ದು, ಹಣ ಬಿಡುಗಡೆಗೆ ಆದೇಶಿಸಲಾಗಿದೆ’ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 

`ಹಿಂದುಳಿದ ವರ್ಗಗಳ 1.90 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಬಾಕಿ ಇದೆ. ಒಂದು ವಾರದೊಳಗೆ ಅನುದಾನ ಬಿಡುಗಡೆ ಮಾಡಿ, ಆ ಮಕ್ಕಳಿಗೆ ತಲುಪಿಸಲು ಅಗತ್ಯ ಕ್ತಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಇಲಾಖೆ ತ್ವರಿತಗತಿಯಲ್ಲಿ ಕ್ರಮ ಕೈಗೊಂಡಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!