ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಧಾವಿಸಬೇಕು ಡಾ.ರಫೀಕ್ ಅಹಮದ್
ಸುಮಾರು 30 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ನೆರವಿಗೆ ಕೂಡಲೇ ಸರ್ಕಾರ ಧಾವಿಸಬೇಕು ಎಂದು ನಗರದ ಮಾಜಿ ಶಾಸಕ ರಫೀಕ್ ಅಹಮದ್ ಸರ್ಕಾರವನ್ನು ಆಗ್ರಹಿಸಿದರು. ಅವರು ನಗರದ ಜಿಲ್ಲಾಧಿಕಾರಿಗಳ ಎದುರು ಕಚೇರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಅತಿಥಿ ಉಪನ್ಯಾಸಕರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದು ಕನಿಷ್ಠ ಮಟ್ಟದ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರಕ್ಕೆ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಹಾಗೂ ಸೇವಾ ವಿಲಿನಿಕರಣಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾಗ್ಯೂ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳದೆ ಅವರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದು, ಏಳೂವರೆ ಸಾವಿರ ಜನ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆಸಿದೆ.
ಹಾವು ಸಾಯಬಾರದು ಕೋಲು ಮುರಿಯಬಾರದು ಎಂಬ ಗಾದೆಯಂತೆ ಸರಕಾರ ಅತಿಥಿ ಉಪನ್ಯಾಸಕರ ಹಿತರಕ್ಷಣೆಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದು ಕೂಡಲೇ ಸರ್ಕಾರ ಇವರಿಗೆ ಸೇವಾ ಭದ್ರತೆ ಒದಗಿಸಿ ಖಾಯಂ ಉಪನ್ಯಾಸಕರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು.
ತಾವು ಈಗಾಗಲೇ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಗಮನಕ್ಕೆ ಈ ವಿಷಯವನ್ನು ತಂದಿದ್ದು ಅವರು ಸಹ ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ತಾವು ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಿದ್ದು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.
ಈಗಾಗಲೇ ಅನೇಕ ಮಂದಿ ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆ ಕಷ್ಟಕರವಾದ್ದರಿಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವೆಯನ್ನು ವಿಲೀನಿಕರಣಗೊಳಿಸಿ ಅವರ ಜೀವನ ನಿರ್ವಹಣೆಗೆ ನೆರವಾಗಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಜಿ.ಕೆ.ನಾಗಣ್ಣ ಸುನಿಲ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.