ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್.
ಬೆಂಗಳೂರು. : “ಸಿದ್ದರಾಮಯ್ಯ ಎಂಬ ಹೆಸರಿನ ನಾನು.. ” ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಲಕ್ಷಾಂತರ ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್, ಸ್ಟಾಲಿನ್ , ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾದರು.
ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಡಾ.ಜಿ ಪರಮೇಶ್ವರ್ ಅವರು ಮೊದಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿರುವ ಕೆ.ಎಚ್ ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕೇಜೆ ಜಾರ್ಜ್, ಝಮೀರ್ ಅಹ್ಮದ್, ಪ್ರಿಯಾಂಕ ಖರ್ಗೆ, ರಾಮಲಿಂಗ ರೆಡ್ಡಿ ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.