ರಾಜ್ಯದ ಹಲವೆಡೆ ಸೆ.5ರವರೆಗೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಸೆ.5ರವರೆಗೆ ರಾಜ್ಯದ 9 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಜೂನ್ ಹಾಗೂ ಜುಲೈ ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರೀ ವರ್ಷಧಾರೆಯಾಗಿತ್ತು. ಜುಲೈ ತಿಂಗಳಲ್ಲಿ ಬಿದ್ದ ಮಳೆಯ ವೇಳೆ ನದಿ, ಹಳ್ಳಕೊಳ್ಳ, ಕೆರೆಗಳು ಉಕ್ಕಿ ಹರಿದಿದ್ದವು. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಜನಜೀವನ ಅಸ್ತವ್ಯಸ್ತವಾಗಿತ್ತು. ಆಗಸ್ಟ್ ಮೊದಲ ವಾರದಲ್ಲಿಯೂ ಕರಾವಳಿ, ಮಳೆನಾಡು ಭಾಗಗಳಲ್ಲಿ ಮಳೆಯಾಗಿತ್ತು. ನಂತರ ಅಬ್ಬರ ಕಡಿಮೆಯಾಗಿತ್ತು.
ಆದರೆ, ಕಳೆದ ವಾರ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಮುಂಗಾರು ಮಳೆ ಚುರುಕುಗೊಂಡಿದೆ. ಹಲವೆಡೆ ಚದುರಿದಂತೆ ಧಾರಾಕಾರ, ಹಗುರ ಮಳೆಯಾಗುತ್ತಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ತೀರ ಪ್ರದೇಶದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಮೀ ಇರುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ