ಇಂದು ಸಂಜೆಯ ಸಭೆಯಲ್ಲಿ ಮುಖ್ಯಮಂತ್ರಿ ಹೆಸರು ಘೋಷಣೆ ಆಗಬಹುದೇ…..?
ಬೆಂಗಳೂರು: ಯಡಿಯೂರಪ್ಪ ರಾಜೀನಾಮೆಯಿಂದ ತೆರವುಗೊಂಡಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಇಂದೇ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಮುಖಂಡರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಾತ್ರಿಯ ಒಳಗೆ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.
ಇನ್ನು ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಕೇಳಿಬರುತ್ತಿದ್ದು ರಾಜ್ಯದ ಚುಕ್ಕಾಣಿ ಯಾರ ಕೈಸೇರಲಿದೆ ಎಂಬುದು ಎಲ್ಲರಲ್ಲೂ ಕಾಡತೊಡಗಿದ್ದು ಶೀಘ್ರವೇ ಪ್ರಭಾವಿ ನಾಯಕರ ಹೆಸರು ಅಂತಿಮವಾಗಿ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆ.