ಮೂರೂ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಜೆಡಿಎಸ್ ಹಾಗೂ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ -ಕಾಂಗ್ರೆಸ್ ಮುಖಂಡ ಅತಿಕ್ ಅಹ್ಮದ್.
ತುಮಕೂರು: ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅತೀಕ್ ಅಹಮದ್ ಹೇಳಿದರು.
ಅವರು ನಗರದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಭೂತಪೂರ್ವ ವಿಜಯ ಸಾಧಿಸಿದ್ದು, ಇದರೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಅಸಂಬದ್ಧವಾಗಿ ಮಾತನಾಡುತ್ತಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ರಾಜ್ಯದ ಜನರಿಂದ ಉತ್ತಮವಾದ ತೀರ್ಮಾನ ದೊರೆತಿದ್ದು ಗೆಲುವಿನ ಸಾಧಿಸಿದ ಮೂರು ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಾ, ರಾಜ್ಯದ ಜನತೆಗೆ ಕೇವಲ ಸುಳ್ಳನ್ನೇ ಹೇಳುತ್ತಾ, ಸುಳ್ಳನ್ನು ಸತ್ಯವನ್ನಾಗಿಸುವ ಕೆಲಸ ಮಾಡಿದ್ದರು. ಈ ರೀತಿಯ ಸುಳ್ಳು ಪ್ರಚಾರಗಳಿಗೆ ಸೊಪ್ಪು ಹಾಕದ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವುದರ ಮೂಲಕ ರಾಜ್ಯ ಸರ್ಕಾರಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.
ರಾಜ್ಯದಲ್ಲಿ ಡಾ. ಜಿ ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ಪ್ರಣಾಳಿಕಾ ಸಮಿತಿ ನೀಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ರಾಜ್ಯದ ಜನರಿಂದ ಉತ್ತಮ ಪ್ರತಿಕ್ರಿಯ ವ್ಯಕ್ತವಾಗಿರುವುದು ಈ ಚುನಾವಣೆಯಿಂದ ತಿಳಿದು ಬಂದಿದ್ದು, ರಾಜ್ಯದಲ್ಲಿ ಮುಂದೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇದು ದಿಕ್ಯೂಚಿಯಾಗಲಿದೆ ಎಂದರು.
ತುಮಕೂರು ಮಹಾನಗರ ಪಾಲಿಕೆ ಚುನಾವಣೆಗೆ ಈಗಾಗಲೇ ಪಕ್ಷವನ್ನು ಸಂಘಟಿಸುತ್ತಿದ್ದು, ಪ್ರತಿ ವಾರ್ಡ್ಗಳಲ್ಲಿಯೂ ಸಹ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಚುನಾವಣೆಯ ಫಲಿತಾಂಶದ ನಂತರ ಮತ್ತಷ್ಟು ಉತ್ಸಾಹ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಬಂದಿದ್ದು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಖಚಿತವಾಗಿ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಾಜಿ ಕಾಂಗ್ರೆಸ್ ಪಕ್ಷ ಜನರ ಪರವಾಗಿದೆ ಎಂಬುದನ್ನು ಉಪಚುನಾವಣೆಯ ಫಲಿತಾಂಶ ತೋರಿಸಿದ್ದು, ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನರ ಆಶೀರ್ವಾದ ಪಡೆದ ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರವನ್ನು ಅಭದ್ರಗೊಳಿಸಲು ಪಿತೂರಿ ನಡೆಸುತ್ತಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಜನರು ಸರಿಯಾದ ಉತ್ತರ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಾಸಿರ್ ಪಾಷ ಮುಜೀಬ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.